
Mangaluru: ಯಕ್ಷಗಾನ ಮೇರು ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ನಗರದ ಪಂಪ್ ವೆಲ್ ನಲ್ಲಿರುವ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಯಕ್ಷಗಾನ ಕಲಾವಿದ, ಮಾಜಿ ಶಾಸಕರು ಆಗಿದ್ದ ಸುಂದರ್ ರಾವ್ ಐದು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಕಲಾ ಸೇವೆ ಮಾಡಿದ್ದಾರೆ. 90 ರ ಹರೆಯದ ಸುಂದರ್ ರಾವ್ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ಕುಟುಂಬಿಕರು ತಿಳಿಸಿದ್ದಾರೆ.
1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದ ಸುಂದರ್ ರಾವ್, ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಗಣ್ಯರು ಹಾಗೂ ಯಕ್ಷಕಲಾರಂಗವು ಸಂತಾಪ ಸೂಚಿಸಿದೆ.
ಮೃತರ ಅಂತ್ಯಕ್ರಿಯೆಯು ನಾಳೆ ಮಂಗಳೂರಿನಲ್ಲಿ ನಡೆಯಲಿರುವುದಾಗಿ ಕುಟುಂಬಿಕರು ತಿಳಿಸಿದ್ದಾರೆ.