High Alert | ವಾಯುಭಾರ ಕುಸಿತ; ಕರಾವಳಿಯಲ್ಲಿ ಹೈ ಅಲರ್ಟ್; ಭರ್ಜರಿ ಮಳೆ ಮುನ್ಸೂಚನೆ!
Wednesday, October 16, 2024
ಉಡುಪಿ/ದಕ್ಷಿಣ ಕನ್ನಡ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯಾಯ ಜಿಲ್ಲಾಡಳಿತವು ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕಾ ಸೂಚನೆಗಳನ್ನು ನೀಡಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರ ಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಉಭಯ ಜಿಲ್ಲೆಗಳಿಗೂ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.